ಮಂಕುತಿಮ್ಮನ ಕಗ್ಗ – ದಿನಕ್ಕೊಂದು ಕಗ್ಗ 0೩

ಇಹುದೊ ಇಲ್ಲವೊ ತಿಳಿಯಗೊಡದೊಂದು ವಸ್ತು ನಿಜ।
ಮಹಿಮೆಯಿಂ ಜಗವಾಗಿ ಜೀವವೇಷದಲಿ ॥
ವಿಹರಿಪುದದೊಳ್ಳಿತೆಂಬುದು ನಿಸದವಾದೊಡಾ ।
ಗಹನ ತತ್ತ್ವಕೆ ಶರಣೊ – ಮಂಕುತಿಮ್ಮ ॥ ೩ ॥

ತಿಳಿಯಗೊಡದೊಂದು=ತಿಳಿಯಗೊಡದ ಒಂದು

ವಿಹರಿಪುದದೊಳ್ಳಿತೆಂಬುದು = ವಿಹರಿಪುದು ( ವಿಹಾರ ಮಾಡುವುದು) +ಅದು+ಒಳ್ಳಿತು = ಒಳ್ಳೆಯದು +ಎಂಬುದು

ನಿಸದವಾದೊಡಾ = ನಿಸದವಾದೊಡೆ + ಆ
ವಿಹಾರಮಾಡುವುದು ಎಂದರೆ, ಎಲ್ಲದರಲ್ಲೂ ವ್ಯಾಪಕವಾಗಿ ಚೈತನ್ಯ ರೂಪದಲ್ಲಿರುವುದು ಎಂದೂ ಅರ್ಥೈಸಬಹುದು. ನಿಸದವಾದೊಡೆ ಎಂದರೆ ನಿಜವಾದರೆ ಎಂದೇ ಅರ್ಥೈಸಬೇಕು.

ಮಾನವರಲ್ಲಿ ಇದು ಒಂದು ನಿರಂತರ ಪ್ರಶ್ನೆ. ಆ ದೇವರೆಂಬ ವಸ್ತು ಇದೆಯೋ ಇಲ್ಲವೋ ಎಂದು. ಇದೆ ಎಂದರೆ, ಅದಕ್ಕೆ ನಾನಾ ಹೆಸರುಗಳು, ರೂಪಗಳು, ಪೂಜೆಗಳು, ಹಲವು ಪೂಜಾ ವಿಧಾನಗಳು, ಆಚಾರಗಳು, ಸಂಪ್ರದಾಯಗಳು ಆ ದೇವರ ರೂಪ ಮತ್ತು ಕಾರ್ಯವೈಖರಿಗೆ ನಾನಾ ಭಾಷ್ಯಗಳು. ಅನಾದಿ ಕಾಲದಲ್ಲೂ ಆ ದೇವರ ಅಸ್ತಿತ್ವವನ್ನು ಪ್ರಶ್ನಿಸುವ ” ಚಾರ್ವಾಕ” ರೆಂಬುವರೂ ಇದ್ದರು. ಇಂದಿಗೂ ಆ ದೇವರೆಂಬ ವಸ್ತುವನ್ನು ನಂಬದಿರುವರು ಇದ್ದಾರೆ. ಕೆಲವರಿಗೆ ಧೃಢವಾದ ನಂಬಿಕೆ. ಇನ್ನೂ ಕೆಲವರಿಗೆ ಅನುಮಾನ. ಮತ್ತೆ ಕೆಲವರಿಗೆ ಅದು ಆಗಾಗ ಬಂದು ಹೋಗುವ ವಿಚಾರ. ಕೆಲವರಿಗೆ ಸಂಕಟ ಬಂದಾಗ ಮಾತ್ರ ದೇವರ ನೆನಪು, ಕೆಲವರಿಗೆ ಬರೀ ತೋರಿಕೆಗೆ ಭಕ್ತಿ. ಮತ್ತು ಕೆಲವರಿಗೆ ಹೊರಗೆ ತೋರದಿದ್ದರೂ ಆಂತರ್ಯದಲ್ಲಿ ಶುಧ್ಧ ಭಕ್ತಿ.

ಇಲ್ಲಿ ಡಿ.ವಿ.ಜಿ ಯವರೂ ಸಹ ” ನಿಸದವಾದೊಡೆ” ಎಂದಿದ್ದಾರೆ. ” ಜಗವ ಸೃಜಿಸಿ, ಗತಿ ಸೂತ್ರವನಾಡಿಸಿ” ಎಂದಿದ್ದಾರೆ ದಾಸರು. ಅಂದರೆ ಜಗತ್ತನ್ನು ಸೃಷ್ಟಿಸಿ, ಜಗತ್ತಿನ ಎಲ್ಲ ಜೀವರಾಶಿಗಳನ್ನೂ ತನ್ನ ಇಷ್ಟದಂತೆ ಪರಮಾತ್ಮ ಆಡಿಸುವನೆಂಬ ಅರ್ಥದಲ್ಲಿದೆ ದಾಸರ ಉಕ್ತಿ. ಹಾಗೆ ಇಡೀ ವಿಶ್ವವನ್ನು ಸೃಷ್ಟಿಮಾಡಿ, ಎಲ್ಲ ಜಡ ಮತ್ತು ಜೀವಿಗಳಲ್ಲೂ ತಾನೇ ತಾನಾಗಿ ವ್ಯಾಪಿಸಿರುವ ಆ ಪರಮಾತ್ಮನೆಂಬುವುದು ಒಳ್ಳೆಯದು ಮತ್ತು ಇರುವುದು ಸತ್ಯವಾದರೆ, ಆ ಗಹನಕ್ಕೆ ಅಂದರೆ ಗೂಢವಾದ, ಊಹೆ, ಅರಿವು ಮತ್ತು ತರ್ಕಕ್ಕೆ ನಿಲುಕದ ಆ ಗುಹ್ಯವಾದ ವಸ್ತುವಿಗೆ ಶರಣಾಗು ಎನ್ನುತ್ತಾರೆ ಡಿ.ವಿ.ಜಿ . ಇಲ್ಲಿ ಸತ್ಯವಾದರೆ ಎಂದಿದ್ದಾರೆ. ಅಂದರೆ ಅದು ಅಸತ್ಯವೂ ಆಗಿರಬಹುದೇ? ಎಂದರೆ, ಅದು ಹಾಗಲ್ಲ. ನಂಬುವವನ ಮನಸ್ಸಿಗೆ, ಮಾತಿಗೆ ಅದು ಸತ್ಯ ಎಂದು ಗೋಚರಿಸಿದರೆ, ಅದನ್ನು ನಂಬು ಮತ್ತು ಶರಣಾಗು ಎಂದು ಹೇಳಿದ್ದಾರೆ. ನಾನು ನಂಬಲ್ಲ ಎಂಬುವವನೂ ಸಹ ” ನಾನು ದೇವರನ್ನು ನಂಬುವುದಿಲ್ಲ ” ಎನ್ನುತ್ತಾನೆ. ಅಂದರೆ ಅವನು ” ” ದೇವರು” ಎನ್ನುವ ವಸ್ತುವೊಂದಿದೆ ನಾನು ಅದನ್ನು ನಂಬುವುದಿಲ್ಲ ಎಂದು ಅರ್ಥವಲ್ಲವೇ?

ಹಾಗಾಗಿ ವಾಚಕರೆ ನಿಮಗೆ ಆ ಪರಮಾತ್ಮ ವಸ್ತುವಿನಲ್ಲಿ ನಂಬಿಕೆ ಇದ್ದರೆ, ಶುಧ್ಧವಾಗಿ ನಂಬಿ, ಶರಣಾಗಿ ಎನ್ನುತ್ತಾರೆ ಡಿ.ವಿ.ಜಿ .

Leave a Reply

Your email address will not be published. Required fields are marked *

Call Now Button